ಮಾಜಿ ಸಿಎಂ ಬಂಗಾರಪ್ಪ ಅವರ ಪುತ್ರ ಹಾಗೂ ಮಾಜಿ ಶಾಸಕ ಮಧು ಬಂಗಾರಪ್ಪ ಅವರ ಹೇಳಿಕೆಯ ಬೆನ್ನಲೇ ಇಂದು ನಟ ಶಿವರಾಜ್ ಕುಮಾರ್ ಧಿಡೀರನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರಲಿದ್ದಾರೆಂಬ ಸುದ್ದಿಗೆ ಮತ್ತಷ್ಟು ಬಲ ಬಂದಿದೆ. ಸೋಮವಾರಬೆಂಗಳೂರಿನ ಸದಾಶಿವನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಬಂದ ಶಿವರಾಜ್ ಕುಮಾರ್, ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಭೇಟಿ ವೇಳೆ ಏನೆಲ್ಲ ಚರ್ಚೆ ನಡೆಯಿತು, ಯಾಕಾಗಿ ಅವರನ್ನು ಶಿವರಾಜ್ ಕುಮಾರ್ ಭೇಟಿ ಮಾಡಿದ್ದರು ಎನ್ನುವುದು ಇನ್ನು ನಿಖರವಾಗಿ ತಿಳಿದಿಲ್ಲವಾದರೂ, ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ ವಿಚಾರವೇ ಅದಕ್ಕೆ ಮೂಲಕ ಕಾರಣ ಎನ್ನುವುದು ಅಷ್ಟೇ ಸತ್ಯ. ಕಳೆದ ಮೂರು ದಿನಗಳ ಹಿಂದಷ್ಟೇ ಮಾಜಿ ಶಾಸಕ ಮಧು ಬಂಗಾರಪ್ಪ ಕೂಡ ಡಿ.ಕೆ.ಶಿ ಅವರನ್ನು ಭೇಟಿ ಅವರೊಂದಿಗೆ ಮಾತುಕತೆ ನಡೆಸಿದ್ದರು. ಡಿ.ಕೆ. ಶಿವಕುಮಾರ್ ಅವರೊಂದಿಗಿನ ಮಾತುಕತೆ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ತಾವು ಕಾಂಗ್ರೆಸ್ ಸೇರುವ ಸಂಬಂಧ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾಗಿ ಹೇಳಿದ್ದರು. ಹಾಗೆಯೇ ತಮ್ಮೊಂದಿಗೆ ಅಕ್ಕ ಗೀತಾ ಶಿವರಾಜ್ ಕುಮಾರ್ ಕೂಡ ಕಾಂಗ್ರೆಸ್ ಸೇರುತ್ತಿದ್ದಾರೆಂದು ಹೇಳಿದ್ದರು. ಈ ಹೇಳಿಕೆಯ ಬೆನ್ನಲೇ ಇಂದು ನಟ ಶಿವರಾಜ್ ಕುಮಾರ್ , ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.