ಸಂಚಾರಿಯ ಹೊಸ ಸಂಚಾರ! ಮೇಲೊಬ್ಬ ಮಾಯಾವಿ ಎಂಬ ವಿಭಿನ್ನ ಚಿತ್ರ ತೆರೆಗೆ ಸಜ್ಜು…

ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ’ ಚಲನಚಿತ್ರ ದೇಶಾದ್ಯಂತ ಸದ್ದು ಮಾಡುತ್ತಿರುವುದು ಗೊತ್ತೇ ಇದೆ. ರಕ್ತಚಂದನ ಮಾಫಿಯಾವನ್ನೇ ಕೇಂದ್ರವನ್ನಾಗಿಸಿ ಆಂಧ್ರದ ದಟ್ಟಾರಣ್ಯದಲ್ಲಿ ನಡೆಯುವ ಆ ಕರಾಳ ದಂಧೆ ಪ್ರೇಕ್ಷಕರನ್ನು ತುದಿಗಾಲಿನಲ್ಲಿ ಇರಿಸುವಂತೆ ಮಾಡಿದೆ. ‘ಪುಷ್ಪ’ ಚಿತ್ರದ ಮಾದರಿಯಲ್ಲೇ ನಮ್ಮ ರಾಜ್ಯದ ಪಶ್ಚಿಮ ಘಟ್ಟದಲ್ಲಿ ಬಹುದೊಡ್ಡ ದಂಧೆ ಕಾರ್ಯನಿರ್ವಹಿಸುತ್ತಿದೆ. ಈ ಮಾಫಿಯಾದ ಬ್ಯಾಕ್‌ಡ್ರಾಪ್‌ನಲ್ಲೇ ಸಂಚಾರಿ ವಿಜಯ್ ಅಭಿನಯದ `ಮೇಲೊಬ್ಬ ಮಾಯಾವಿ’ ಚಿತ್ರ ಕೂಡ ಇದೀಗ ಬಿಡುಗಡೆಗೆ ಸಿದ್ಧವಾಗಿದೆ.

ಅರಣ್ಯಪ್ರದೇಶವನ್ನೇ ಹೊದ್ದುಕೊಂಡಿರುವ ದಕ್ಷಿಣ ಕನ್ನಡ ಮತ್ತು ಕೊಡಗು ಗಡಿಭಾಗದ ಪುಷ್ಪಗಿರಿ ಅಭಯಾರಣ್ಯ ಭಾಗದಲ್ಲಿ ಹರಳು ಕಲ್ಲು ದಂಧೆ ಮತ್ತೆ ಕಾರ್ಯಾರಂಭಗೊಂಡಿದೆ. ಕೊಡಗು-ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಪುಷ್ಪಗಿರಿ ಅರಣ್ಯದಲ್ಲಿ ಈ ನಿಗೂಢ ಹರಳುಕ ಲ್ಲಿನ ಗಣಿಗಾರಿಕೆ ನಡೆಯುತ್ತಿದೆ. ಆಭರಣ, ಉಂಗುರುಗಳಿಗೆ ಬಳಸುವ ಈ ಹರಳಿನ ಕಲ್ಲಿಗಾಗಿ ಅಕ್ರಮ ದಂಧೆಕೋರರು ಹುಡುಕಾಟ ನಡೆಸುತ್ತಿದ್ದು ಅರಣ್ಯ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ. ದಶಕಗಳ ಹಿಂದೆ ನಿಂತು ಹೋಗಿದ್ದ ಹರಳು ಕಲ್ಲಿನ ಗಣಿಗಾರಿಕೆ ಮತ್ತೆ ಆರಂಭಗೊಂಡಿದ್ದು ಕೂಜಿಮಲೆ, ಸುಟ್ಟತ್ ಮಲೆ ಅರಣ್ಯ ಪ್ರದೇಶದಲ್ಲಿ ಹೊಳೆಯುವ ಕಲ್ಲಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಅಚ್ಚರಿಯ ವಿಚಾರವೆಂದರೆ, `ಮೇಲೊಬ್ಬ ಮಾಯಾವಿ’ ಚಿತ್ರತಂಡ ಈ ಅಪಾಯದ ಜಾಗಗಳಲ್ಲೇ ಚಿತ್ರೀಕರಣವನ್ನು ಮಾಡಿತ್ತು.

ಪುಷ್ಪಗಿರಿ ಅರಣ್ಯವಲಯದ ಕೂಜಿಮಲೆ ಮತ್ತು ಸುಟ್ಟತ್ ಮಲೆಯಲ್ಲಿ ಈಗ ಅಕ್ರಮ ದಂಧೆ ಮತ್ತೇ ಗರಿಗೆದರಿದೆ. ಕಳೆದ ಎರಡು ದಶಕಗಳ ಹಿಂದೆ ಸುಬ್ರಹ್ಮಣ್ಯ ಮತ್ತು ಕೊಡಗಿಗೆ ಹೊಂದಿಕೊಂಡಿರುವ ಕೂಜಿಮಲೆ ಮತ್ತು ಸುಟ್ಟತ್ ಮಲೆ ಎಂಬ ಬೆಟ್ಟಗಳಲ್ಲಿ ಹರಳು ಕಲ್ಲು ಪತ್ತೆಯಾಗಿತ್ತು. ಈ ಕಲ್ಲಿಗೆ ಆಗ ಕೆಜಿಯೊಂದಕ್ಕೆ 500 ರೂಪಾಯಿ ಇಂದ ಆರಂಭವಾಗಿ ಸಾವಿರಾರು ರೂಪಾಯಿ ಬೆಲೆ ದೊರೆಯುತ್ತಿತ್ತು. ಆದರೀಗ ಈ ಹರಳು ಕಲ್ಲಿಗೆ ರಾಜಸ್ಥಾನ ,ಗುಜರಾತ್ , ಮುಂಬೈ ಆಭರಣ ತಯಾರಿಕರಿಂದ ಭಾರೀ ಬೇಡಿಕೆ ಇದೆ. ಒಂದು ಮಾಹಿತಿಯ ಪ್ರಕಾರ ಈ ಹರಳು ಕಲ್ಲಿಗೆ ಪ್ರಸ್ತುತ 1 ಕೆಜಿಗೆ 30 ರಿಂದ 40 ಸಾವಿರ ರೂಪಾಯಿ ಇದೆ ಎಂದು ಹೇಳಲಾಗಿದೆ. ಈ ಎಲ್ಲಾ ಅಂಶಗಳನ್ನು ಚಿತ್ರತಂಡ `ಮೇಲೊಬ್ಬ ಮಾಯಾವಿ’ಯಲ್ಲಿ ಮನೋರಂಜನೆಯೊಂದಿಗೆ ಪ್ರೇಕ್ಷಕರ ಮುಂದಿಡಲಿದೆ.

ಈ ದಂಧೆಯಿಂದ ಪೃಕೃತಿಗೂ ಅಪಾರ ನಷ್ಟವುಂಟಾಗುತ್ತಿದೆ. ಒಂದು ಕಾಲದಲ್ಲಿ ಹರಳುಕಲ್ಲು ದಂಧೆಯಿಂದಾಗಿ ಹೊಡೆದಾಟ, ಬಡಿದಾಟ ನಡೆದು ಹಲವು ಮಂದಿಯ ಪ್ರಾಣಕ್ಕೆ ಕುತ್ತು ಬಂದಿತ್ತು. ಸುಟ್ಟತ್ ಮಲೆ ಮತ್ತು ಕೂಜಿಮಲೆ ಹರಳು ಕಲ್ಲಿನ ದಂಧೆಗೆ ಅರಣ್ಯ ಇಲಾಖೆ ಕಡಿವಾಣ ಹಾಕಿತ್ತು. ಇದೀಗ ಮತ್ತೆ ಇಲ್ಲಿ ದಂಧೆ ಶುರುವಾಗಿದೆ. ಅದರ ಮೇಲೆ `ಮೇಲೊಬ್ಬ ಮಾಯಾವಿ’ ಚಿತ್ರ ಪ್ರಕೃತಿಯ ಮೇಲೆ ನಡೆಯುತ್ತಿರುವ ವಿಕೃತಿಯ ಮೇಲೂ ಬೆಳಕು ಚೆಲ್ಲಲ್ಲಿದೆ.

ಶ್ರೀ ಕಟೀಲ್ ಸಿನಿಮಾಸ್’ ಬ್ಯಾನರ್‌ನಲ್ಲಿ ಭರತ್‌ ಕುಮಾರ್‌, ತನ್ವಿ ಅಮಿನ್ ಕೊಲ್ಯ ನಿರ್ಮಾಪಕರು. ನಿರ್ದೇಶಕ ಬಿ.ನವೀನ್‌ಕೃಷ್ಣ, ಸಂಚಾರಿ ವಿಜಯ್ ಅವರ ಇರುವೆ’ ಅನ್ನುವ ಪಾತ್ರ ಕಟ್ಟಿಕೊಡುವ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಅನನ್ಯ ಶೆಟ್ಟಿ ನಾಯಕಿಯಾಗಿದ್ದು, ಬಿಗ್‌ಬಾಸ್ ಖ್ಯಾತಿಯ ಚಕ್ರವರ್ತಿ ಚಂದ್ರಚೂಡ್ ಮೊದಲ ಬಾರಿಗೆ ಪೂರ್ಣ ಪ್ರಮಾಣದ ಖಳನಟನಾಗಿ ಕಾಣಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲ, ಅವರಿಲ್ಲಿ ಸಂಭಾಷಣೆ, ಚಿತ್ರಕಥೆಯ ಜೊತೆಯಲ್ಲಿ ಹಾಡನ್ನೂ ಬರೆದಿದ್ದಾರೆ. ಚಿತ್ರದಲ್ಲಿ ಕೃಷ್ಣಮೂರ್ತಿ ಕವತ್ತಾರ್, ಪವಿತ್ರಾ ಜಯರಾಮ್, ಬೆನಕ ನಂಜಪ್ಪ, ಎಮ್.ಕೆ.ಮಠ, ನವೀನ್‌ಕುಮಾರ್, ಲಕ್ಷ್ಮಿ ಅರ್ಪಣ್ , ಮುಖೇಶ್, ಡಾ.ಮನೋನ್ಮಣಿ ಇತರರು ಇದ್ದಾರೆ.

ಚಿತ್ರಕ್ಕೆ ದಿ. ಎಲ್.ಎನ್.ಶಾಸ್ತ್ರೀಯವರ ಸಂಗೀತವಿದೆ. ಹಿನ್ನಲೆ ಸಂಗೀತ ಮಣಿಕಾಂತ್ ಕದ್ರಿ ಮಾಡಿದ್ದಾರ. ಕೆ.ಗಿರೀಶ್ ಕುಮಾರ್ ಅವರ ಸಂಕಲನವಿದೆ. ದೀಪಿತ್ ಬಿಜೈ ರತ್ನಾಕರ್ ಕ್ಯಾಮೆರಾ ಹಿಡಿದಿದ್ದಾರೆ. ರಾಮು ನೃತ್ಯ ಸಂಯೋಜನೆಯಿದೆ. ಚಿತ್ರ ಇಷ್ಟರಲ್ಲೇ ರಿಲೀಸ್‌ ಆಗಲಿದೆ.

Related Posts

error: Content is protected !!