ಕಳೆದ ವಾರ ಬಿಡುಗಡೆಯಾದ ಕಾರ್ತಿಕ್ ಮಾರಲಭಾವಿ ನಿರ್ದೇಶನದಲ್ಲಿ ಮೂಡಿ ಬಂದ ‘ಥಗ್ಸ್ ಆಫ್ ರಾಮಘಡ’ ಸಿನಿಮಾ ಪ್ರೇಕ್ಷಕ ಮಹಾ ಪ್ರಭುಗಳ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದು, ಬಿಡುಗಡೆಯಾದ ಎಲ್ಲಾ ಕಡೆಗಳಲ್ಲೂ ಉತ್ತಮ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಚಿತ್ರದ ಬಗ್ಗೆ ಕೇಳಿ ಬರ್ತಿರುವ ಉತ್ತಮ ವಿಮರ್ಶೆ ಹಾಗೂ ಪ್ರತಿಕ್ರಿಯೆ ಕಂಡು ಚಿತ್ರತಂಡ ಕೂಡ ಖುಷಿಯಾಗಿದೆ.
ಟ್ರೇಲರ್ ಹಾಗೂ ಹಾಡುಗಳ ಮೂಲಕ ಭರವಸೆ ಮೂಡಿಸಿದ್ದ ‘ಥಗ್ಸ್ ಆಫ್ ರಾಮಘಡ’ ಚಿತ್ರ ಕಾರ್ತಿಕ್ ಮಾರಲಭಾವಿ ನಿರ್ದೇಶನದ ಮೊದಲ ಸಿನಿಮಾ. ಸಾಕಷ್ಟು ನಿರೀಕ್ಷೆಯೊಂದಿಗೆ ಜನವರಿ 6ರಂದು ಪ್ರೇಕ್ಷಕರೆದುರು ಬಂದ ಈ ಚಿತ್ರ ಉತ್ತರ ಕರ್ನಾಟಕ ಭಾಗದಲ್ಲಿ1995ರಲ್ಲಿ ನಡೆದ ಸತ್ಯ ಘಟನೆ ಆಧರಿಸಿದೆ. ನೈಜ ಘಟನೆಗೆ ಒಂದಿಷ್ಟು ಸಿನಿಮ್ಯಾಟಿಕ್ ಟಚ್ ಕೊಟ್ಟು ಕ್ರೈಂ ಕಲ್ಟ್ ಕಥಾಹಂದರದ ಜೊತೆ ತೆರೆ ಮೇಲೆ ಬಂದ ಈ ಚಿತ್ರ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಚಂದನ್ ರಾಜ್, ಅಶ್ವಿನ್ ಹಾಸನ್, ಮಹಾಲಕ್ಷ್ಮೀ ಅಭಿನಯಕ್ಕೆ ಪ್ರೇಕ್ಷಕರು ಮನ ಸೋತಿದ್ದಾರೆ. ಮೊದಲ ವಾರ ಸಿನಿಮಾಗೆ ಸಿಕ್ಕಿರೋ ರೆಸ್ಪಾನ್ಸ್ ಚಿತ್ರತಂಡದ ಸಂಭ್ರಮವನ್ನು ಹೆಚ್ಚಿಸಿದ್ದು, ಎರಡನೇ ವಾರದತ್ತ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ.
ಭಾರತ್ ಟಾಕೀಸ್ ನಡಿ ಜೈ ಕುಮಾರ್, ಕೀರ್ತಿ ರಾಜ್ ಥಗ್ಸ್ ಆಫ್ ರಾಮಘಡ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮನು ದಾಸಪ್ಪ ಛಾಯಾಗ್ರಹಣ, ಶ್ರೀಧರ್ ಸಂಕಲನ, ವಿವೇಕ್ ಚಕ್ರವರ್ತಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ.