ನಟ ಅನೀಶ್ ತೇಜೇಶ್ವರ್, ನಿರ್ದೇಶಕ ಅಭಿಷೇಕ್ ಶೆಟ್ಟಿ ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ಸಿನಿಮಾ ‘ಆರಾಮ್ ಅರವಿಂದ್ ಸ್ವಾಮಿ’. ಮಾಸ್ ಹೀರೋ ಆಗಿ ಮಿಂಚಿದ್ದ ಅನೀಶ್ ತೇಜೇಶ್ವರ್ ಇದೇ ಮೊದಲ ಬಾರಿಗೆ ರೋಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಟೈಟಲ್ ಮೂಲಕ ಗಮನ ಸೆಳೆದಿರುವ ಈ ಚಿತ್ರದಿಂದ ಹೊಸದೊಂದು ಅಪ್ಡೇಟ್ ಹೊರಬಿದ್ದಿದೆ.
ರೋಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ‘ಆರಾಮ್ ಅರವಿಂದ್ ಸ್ವಾಮಿ’ ಚಿತ್ರಕ್ಕೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ನೀಡುತ್ತಿದ್ದಾರೆ. ಚಿತ್ರತಂಡ ಅಧೀಕೃತವಾಗಿ ಮಾಹಿತಿ ಹಂಚಿಕೊಂಡಿದ್ದು, ಅರ್ಜುನ್ ಜನ್ಯ ಎಂಟ್ರಿಯಿಂದ ಸಿನಿಮಾ ಮೇಲಿನ ನಿರೀಕ್ಷೆಯೂ ದುಪ್ಪಟ್ಟಾಗಿದೆ.
‘ನಮ್ ಗಣಿ ಬಿಕಾಂ ಪಾಸ್, ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೂರನೇ ಸಿನಿಮಾವಿದು. ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು, ಮಿಲನ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ಅನೀಶ್ ಜೊತೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ.
‘ಅಕಿರ’ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಬೆಂಗಳೂರು ಸುತ್ತಮುತ್ತ ಎರಡು ಶೆಡ್ಯೂಲ್ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಮೂರನೇ ಶೆಡ್ಯೂಲ್ ಕೇರಳದಲ್ಲಿ ಸೆರೆ ಹಿಡಿಯಲು ಪ್ಲ್ಯಾನ್ ಮಾಡಿಕೊಂಡಿದೆ. ಚಿತ್ರಕ್ಕೆ ಸಾಗರ್ ಛಾಯಾಗ್ರಹಣ, ಉಮೇಶ್ ಸಂಕಲನವಿದೆ.