ಜೂನ್ 2ಕ್ಕೆ ಪಿಂಕಿ ಸಿಕ್ತಾಳೆ! ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಪಿಂಕಿ ಎಲ್ಲಿ ರಿಲೀಸ್

ಪ್ರಪಂಚದಾದ್ಯಂತ ಪ್ರತಿಷ್ಠಿತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಪ್ರಶಸ್ತಿ ಹಾಗೂ ಪ್ರಶಂಸೆ ಎರಡನ್ನು ಪಡೆದಿರುವ “ಪಿಂಕಿ ಎಲ್ಲಿ?” ಚಿತ್ರ ಜೂನ್ 2 ರಂದು ಬಿಡುಗಡೆಯಾಗುತ್ತಿದೆ‌. ಈ ವಿಷಯವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು.

ಸುಮಾರು ಮೂರು ವರ್ಷಗಳ ಹಿಂದೆ ಪ್ರಾರಂಭವಾದ ಕಥೆಯಿದು. ಬೆಂಗಳೂರಿನಲ್ಲಿ ನಡೆದ ನೈಜಘಟನೆಯೂ ಹೌದು. ಮಗುವೊಂದು ಕಾಣೆಯಾಗಿರುತ್ತದೆ. ಆದರೆ ಈ ಕಥೆ ಮಗುವಿನ ಸುತ್ತ ಇರುವುದಿಲ್ಲ. ಮಗುವನ್ನು ಕಳೆದುಕೊಂಡವರ ಸುತ್ತ ಇರುತ್ತದೆ. ಕಥೆಯ ಒಂದೆಳೆ ಕೇಳಿ ಮೆಚ್ಚಿಕೊಂಡ ನಿರ್ಮಾಪಕ ಕೃಷ್ಣೇಗೌಡ ಅವರು ನಿರ್ಮಾಣಕ್ಕೆ ಮುಂದಾದರು. ಅಕ್ಷತಾ ಪಾಂಡವಪುರ, ದೀಪಕ್ ಸುಬ್ರಹ್ಮಣ್ಯ, ಪೃಥ್ವಿ, ಗುಂಜಲಮ್ಮ, ಸಂಗಮ್ಮ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ‌.

ಅದರಲ್ಲೂ ಗುಂಜಲಮ್ಮ ಹಾಗೂ ಸಂಗಮ್ಮ ಇಬ್ಬರೂ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರೂ ಸ್ಲಂ ನಿವಾಸಿಗಳು. ನಟನೆ ಗೊತ್ತಿಲ್ಲದ ಇವರು ಸಹಜವಾಗಿ ಅಭಿನಯಿಸಿರುವುದು ಈ ಚಿತ್ರದ ವಿಶೇಷ ‌. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ಅನೇಕ ಚಿತ್ರೋತ್ಸವಗಳಲ್ಲಿ ನಮ್ಮ ಚಿತ್ರ ಪ್ರದರ್ಶನವಾಗಿದೆ. ಜೂನ್ ಎರಡರಂದು ಚಿತ್ರಮಂದಿರಗಳಲ್ಲೂ ಬಿಡುಗಡೆಯಾಗುತ್ತಿದೆ ಎಂದು ನಿರ್ದೇಶಕ ಪೃಥ್ವಿ ಕೋಣನೂರು ತಿಳಿಸಿದರು.

ನಿರ್ದೇಶಕರು ಕಥೆ ಹೇಳುವ ರೀತಿಯೆ ವಿಭಿನ್ನ. ನನಗೂ ಅವರು ಕಥೆ ಹೇಳುವ ರೀತಿ ಆಶ್ಚರ್ಯವಾಯಿತು. ಈ ಚಿತ್ರದಲ್ಲಿ ಮಗುವನ್ನು ಕಳೆದುಕೊಂಡಿರುವ ತಾಯಿಯ ಪಾತ್ರ ನನ್ನದು ಎಂದರು ನಟಿ ಅಕ್ಷತಾ ಪಾಂಡವಪುರ.

ನಾನು ಕಥೆ ಕೇಳಲಿಲ್ಲ. ನಿರ್ದೇಶಕರು ಮಗು ಕಳೆದು ಹೋಗಿರುವ ಸುತ್ತಲ್ಲಿನ ಕಥೆ ಎಂದು ಕಥೆಯ ಒಂದೆಳೆ ಹೇಳಿದರು. ನಾನು ಆಗಲೇ ಚೆನ್ನಾಗಿದೆ . ನೀವು ಕೆಲಸ ಶುರು ಮಾಡಿಕೊಳ್ಳಿ ಎಂದು ಹೇಳಿದೆ. ಬೆಂಗಳೂರಿನಲ್ಲಿ ಮಗುವಿನ ಭವಿಷ್ಯಕ್ಕಾಗಿ ತಂದೆ – ತಾಯಿ ಕೆಲಸಕ್ಕಾಗಿ ಮಗುವನ್ನು ನೋಡಿಕೊಳ್ಳಲು ಬಿಟ್ಟು ಕೆಲಸಕ್ಕೆ ಹೋಗುತ್ತಾರೆ. ಆದರೆ ಇಲ್ಲಿ ಆ ಮಗುವೆ ಇನ್ನೊಬ್ಬರ ಭವಿಷ್ಯಕ್ಕೆ ದಾರಿಯಾಗಿರುತ್ತದೆ. ಇಂತಹ ಅಪರೂಪದ ಕಥೆ ಈ ಚಿತ್ರದಲ್ಲಿದೆ. ಎಲ್ಲರೂ ನೋಡಿ ಪ್ರೋತ್ಸಾಹಿಸಿ ಎಂದರು ನಿರ್ಮಾಪಕ ಕೃಷ್ಣೇಗೌಡ.

ಚಿತ್ರದಲ್ಲಿ ನಟಿಸಿರುವ ದೀಪಕ್ ಸುಬ್ರಹ್ಮಣ್ಯ, ಗುಂಜಲಮ್ಮ, ಸಂಗಮ್ಮ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

Related Posts

error: Content is protected !!